ಕರ್ನಾಟಕದ ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿತರಿಸಲಾದ ಶೂಗಳು ತೀರಾ ಕಳಪೆ ದರ್ಜೆಯಿಂದ ಕೂಡಿದ್ದು, ತೊಟ್ಟ ಕೆಲವೇ ನಿಮಿಷ ಅಥವಾ ದಿನಗಳಲ್ಲಿ ಹರಿದು ಹೋಗುತ್ತಿವೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ ತನಿಖೆಗೆ ಆದೇಶಿಸಿದ್ದಾರೆ. ರಾಜ್ಯದ 15 ಜಿಲ್ಲೆಗಳಲ್ಲಿ ಪೂರೈಸಲಾದ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಯಲ್ಲಿ ಲೋಪದೋಷಗಳು ಹಾಗೂ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸಂವಿಧಾನದ ವಿಧಿ 21ಎ ಅಡಿಯಲ್ಲಿ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅವರ ಶಿಕ್ಷಣದ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟ ಉಪಲೋಕಾಯುಕ್ತರು, ಕಳಪೆ ಶೂ ಪೂರೈಕೆಯ ತನಿಖೆಗೆ ನಿರ್ದೇಶಿಸಿದ್ದಾರೆ. ಈ ಸಂಬಂಧ 15 ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಪಿಐ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಆಯಾ ಜಿಲ್ಲೆಗಳ ಲೋಕಾಯುಕ್ತ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಪಿ) ಗಳು ಖರೀದಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಬೇಕು ಮತ್ತು ಎರಡು ವಾರಗಳಲ್ಲಿ ಪ್ರಾಥಮಿಕ ವರದಿಯನ್ನು ಸಲ್ಲಿಸಬೇಕೆಂದು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಈ ಆದೇಶದ ಪ್ರತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೂ ರವಾನಿಸಲಾಗಿದೆ.