ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ರಸ್ತೆಬದಿಯ ತಗ್ಗಿಗೆ ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಗೋವಾ ಅಧ್ಯಯನ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬಸ್ನಲ್ಲಿ 49 ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಮುಂಜಾನೆ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಐಮಂಗಲ ಬಳಿ ಪಲ್ಟಿಯಾಗಿದೆ. ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಹಾರಿಕೆ ವಾಹನ ಸವಾರರು, ಬಸ್ಸಿನ ಗಾಜುಗಳನ್ನು ಒಡೆದು ಒಳಗೆ ಸಿಲುಕಿದ್ದವರನ್ನು ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಮಂಗಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಚಾಲಕನ ನಿದ್ರೆಯ ಮಂಪರು ಅಥವಾ ತಾಂತ್ರಿಕ ದೋಷ ಕಾರಣವೇ ಎಂಬುದರ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.